ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸುವಾಗ ತೆಗದುಕೊಳ್ಳುವ ಸುರಕ್ಷಿತಾ ಕ್ರಮದ ಕುರಿತು ಹೈಕೋರ್ಟ್ ತಿಳಿಸಿದ್ದೇನು..?
ಕೊರೋನಾ ವೈರಸ್ ಇಂದಾಗಿ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿತ್ತು ಈ ಸಮಯದಲ್ಲಿ ನಡೆಯ ಬೇಕಿದ್ದ ಎಲ್ಲಾ ತರಗತಿಯ ಪರೀಕ್ಷೆಗಳನ್ನು ರದ್ದು ಗೊಳಿಸಲಾಗಿತ್ತು ಆದರೆ ವಿದ್ಯಾರ್ಥಿಯ ಭವಿಷ್ಯವನ್ನು ನಿರ್ಧರಿಸಬಲ್ಲ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಹೊರತು ಪಡಿಸಿ ಉಳಿದೆಲ್ಲಾ ಪರೀಕ್ಷೆಗಳನ್ನು ರದ್ದು ಪಡಿಸಲಾಗಿತ್ತು. ಆದರೆ ಲಾಕ್ ಡೌನ್ ಮುಂದು ವರಿಯುತ್ತಿರುವುದರಿಂದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಮುಂದೂಡಲಾಗುತ್ತಿತ್ತು. ಆದರೆ ಎಸ್ಎಸ್ ಎಲ್ ಸಿ ಪರೀಕ್ಷೆ ಇನ್ನು ಮುಂದೂಡುವುದು ಸರಿಯಲ್ಲ ಎಂದು ಜೂನ್ 25 ರಿಂದ ನಡೆಸಲು ಸರ್ಕಾರ ನಿರ್ಧರಿಸಿದೆ. ಇದಕ್ಕೆ ಹೈಕೋರ್ಟ್ ಕೆಲವು ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ತಾಖೀತು ಮಾಡಿದೆ. ಅಷ್ಟಕ್ಕೂ ಹೈಕೋರ್ಟ್ ತಿಳಿಸಿದ ನಿಯಮಗಳೇನು..?
ಕೋವಿಡ್-19 ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಸಂಬಂಧ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ರೂಪಿಸಿರುವ ಸುರಕ್ಷತಾ ಮಾರ್ಗಸೂಚಿಗಳಿಗೆ (ಎಸ್‌ಓಪಿ) ಅಸ್ತು ಎಂದಿರುವ ಹೈಕೋರ್ಟ್ ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರಕ್ಕೆ ತಾಕೀತು ಮಾಡಿದೆ.
ಬರುವ ಜೂನ್ 25ರಿಂದ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಕೈಗೊಂಡಿರುವ ನಿರ್ಧಾರ ರದ್ದುಪಡಿಸುವಂತೆ ಕೋರಿ ವಕೀಲರಾದ ಎಂ. ಲೋಕೇಶ್ ಸೇರಿದಂತೆ ಮೂವರು ಸಲ್ಲಿಸಿದ್ದ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಹಾಗೂ ನ್ಯಾ. ಪಿ. ಕೃಷ್ಣ ಭಟ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ಈ ವೇಳೆ ಸರ್ಕಾರದ ಪರ ವಕೀಲರು, ಎಸ್‌ಎಸ್ ಎಲ್‌ಸಿ ಪರೀಕ್ಷೆಗಳನ್ನು ನಡೆಸುವ ಸಂಬಂಧ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ರೂಪಿಸಿರುವ ಸುರಕ್ಷತಾ ಮಾರ್ಗಸೂಚಿಗಳನ್ನು (ಎಸ್‌ಓಪಿ) ನ್ಯಾಯ ಪೀಠಕ್ಕೆ ಸಲ್ಲಿಸಿದರು. ಪರೀಕ್ಷೆ ನಡೆಸುವ ವೇಳೆ ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿ ಮತ್ತು ಸಿಬ್ಬಂದಿ ವರ್ಗಕ್ಕೆ ಕೊರೋನಾ ವೈರಸ್ ಸೋಂಕು ಹರಡುವುದನ್ನು ನಿಯಂತ್ರಿಸಲು ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ಮಾಸ್ಕ್-ಸ್ಯಾನಿಟೈಸರ್, ಆರೋಗ್ಯ ತಪಾಸಣೆ ಕಡ್ಡಾಯ ಗೊಳಿಸಲಾಗಿದೆ. ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ವೇಳೆ ವಿದ್ಯಾರ್ಥಿಗಳ ನಡುವೆ ಸಾಮಾಜಿಕ ಅಂತರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಸರ್ಕಾರಿ ವಕೀಲರು ನ್ಯಾಯಪೀಠಕ್ಕೆ ವಿವರಿಸಿದರು.
ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಪರೀಕ್ಷೆ ಸಂದರ್ಭದಲ್ಲಿ ಸಾಮಾಜಿಕ ಅಂತರ ಪಾಲನೆ, ಸ್ವತ್ಛತೆ ಕಾಯ್ದುಕೊಳ್ಳುವುದು ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳ ಜೊತೆಗೆ ಸುರಕ್ಷತಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿ ಅರ್ಜಿ ಇತ್ಯರ್ಥಪಡಿಸಿತು. ಇದರೊಂದಿಗೆ ಪರೀಕ್ಷೆ ನಡೆಸಲು ಸರ್ಕಾರಕ್ಕೆ ಹಾದಿ ಸುಗಮವಾಗಿದೆ.